ಸರ್ಕಾರಿ ಜಮೀನು ಒತ್ತುವರಿ ಆರೋಪ; ಶ್ರೀ ಶ್ರೀ ರವಿಶಂಕರ್ ಗುರೂಜಿ ವಿರುದ್ಧದ ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್
ಪ್ರಕರಣ ರದ್ದುಪಡಿಸುವಂತೆ ಕೋರಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆಯನ್ನು ಮುಂದೂಡಿದೆ

Published : January 8, 2026 at 9:38 PM IST
ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪಕ್ಕೆ ಸಂಬಂಧ ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಾಖಲೆಗಳನ್ನು ಪರಿಶೀಲಿಸದೇ ತಡೆ ನೀಡುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಈ ಸಂಬಂಧ ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
ವಿಚಾರಣೆ ವೇಳೆ ರವಿಶಂಕರ್ ಗುರೂಜಿ ಪರ ವಕೀಲ ಪಿ. ಪ್ರಸನ್ನಕುಮಾರ್, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ವಿಭಾಗೀಯ ನ್ಯಾಯಪೀಠ ನೀಡಿದ ಆದೇಶ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪ್ರತಿವಾದಿಗಳಾಗಿದ್ದವರ ಚಟುವಟಿಕೆಗಳಿಗೂ ಈಗಿನ ಅರ್ಜಿದಾರರಿಗೆ (ಗುರೂಜಿ) ಯಾವುದೇ ಸಂಬಂಧವಿಲ್ಲ. ಅರ್ಜಿದಾರರು ಯಾವುದೇ ಆಸ್ತಿಯನ್ನೂ ಹೊಂದಿಲ್ಲ, ಯಾವುದೇ ಜಾಗವನ್ನೂ ಅತಿಕ್ರಮಣ ಮಾಡಿಲ್ಲ. ಆದ್ದರಿಂದ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪೀಠ, ಈ ಹಂತದಲ್ಲಿ ತಡೆ ನೀಡಿದರೆ ವಿಭಾಗೀಯ ನ್ಯಾಯಪೀಠದ ಅಭಿಪ್ರಾಯಗಳಿಗೆ ವಿರುದ್ಧವಾಗಲಿದೆ. ಆದ್ದರಿಂದ ಯಾವುದೇ ದಾಖಲೆಗಳನ್ನು ನೋಡದೇ ಪ್ರಕರಣಕ್ಕೆ ತಡೆ ನೀಡುವುದು ಅಥವಾ ಆರ್ಜಿದಾರರ ಪರವಾಗಿ ರಕ್ಷಣೆಯ ಆದೇಶ ನೀಡುವುದು ಸೂಕ್ತವಲ್ಲ ಎಂದು ಹೇಳಿತು. ಆದರೆ, ತನಿಖೆಯ ನೋಟಿಸ್ ಬಂದರೆ, ಪ್ರಕರಣವನ್ನು ತುರ್ತು ವಿಚಾರಣೆಗೆ ಪರಿಗಣಿಸಲು ಅರ್ಜಿದಾರರು ಮನವಿ ಸಲ್ಲಿಸಬಹುದು ಎಂದು ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿತು. ಇದೇ ವೇಳೆ, ಸರ್ಕಾರ ಹಾಗೂ ದೂರುದಾರ ಎಸ್. ಲಕ್ಷ್ಮಣಗೌಡಗೆ ನ್ಯಾಯಾಲಯ ನೋಟಿಸ್ ಸಹ ಜಾರಿಗೊಳಿಸಿತು. ಅಲ್ಲದೇ, ಈ ವೇಳೆ ಆರೋಪ ಸಂಬಂಧ ಸಂಪೂರ್ಣ ದಾಖಲೆಗಳನ್ನು ಪಡೆದುಕೊಂಡು ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯದ ಮುಂದೆ ಇಡುವಂತೆ ನಿರ್ದೇಶಿಸಿತು.
ಪ್ರಕರಣದ ಹಿನ್ನೆಲೆ: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ಸರ್ವೆ ಸಂಖ್ಯೆ 164/2, 163/3 ಮತ್ತು 161/7 ಮತ್ತು 160 ರಲ್ಲಿ ಕೆಲವು ಕಟ್ಟಡಗಳು ನಿರ್ಮಾಣವಾಗಿರುವ ಸಂಬಂಧ ನಕ್ಷೆಯಲ್ಲಿ ತಿಳಿಸಲಾಗಿದೆ. ಈ ಸಂಬಂಧ ಪರಿಶೀಲಿಸಬೇಕು. ಅಲ್ಲದೇ, ಸರ್ವೆ ಸಂಖ್ಯೆ 150 ರ ಹೆಚ್ಚು ಒತ್ತುವರಿ ಮಾಡಲಾಗಿದೆ. ವಾಸ್ತವವಾಗಿ ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಲಾಗಿದೆ ಎಂಬ ಸರ್ಕಾರದ ವಾದವನ್ನು ಪರಿಗಣಿಸಿ ಒತ್ತುವರಿ ಮಾಡಿರುವವರು ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ನಿರ್ದೇಶಿಸುವ ಮೂಲಕ ವಿಭಾಗೀಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥ ಮಾಡಿತ್ತು. ಈ ಆದೇಶದ ಅನ್ವಯ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿದೆ. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನು ಓದಿ: ಯೊಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜಾಮೀನು ನೀಡದಂತೆ ಸಿಬಿಐ ವಾದ

