ಬಿಜೆಪಿ-ಜೆಡಿಎಸ್ ಮೈತ್ರಿ ಲೋಕಸಭೆ, ವಿಧಾನಸಭೆಗಷ್ಟೇ ಸೀಮಿತ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ದೇವೇಗೌಡ
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ನಗರ ಪಾಲಿಕೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆೆ ಎಂದು ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡ ಸ್ಪಷ್ಟನೆ ನೀಡಿದರು.

Published : December 27, 2025 at 7:06 AM IST
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ ಆಗಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಹಾನಗರ ಪಾಲಿಕೆ, ನಗರಪಾಲಿಕೆ, ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಏರ್ಪಟ್ಟಿಲ್ಲ, ಈ ಚುನಾವಣೆಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ, ಹೆಚ್.ಡಿ.ದೇವೇಗೌಡ ತಿಳಿಸಿದರು.
ಜೆಡಿಎಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಉತ್ತಮ ಮೈತ್ರಿ ಆಗಿದೆ. ಅದು ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರೆಯುತ್ತದೆ. ಆದರೆ ಪಕ್ಷವನ್ನು ಕಟ್ಟುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳ ಮುಖ್ಯವಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲು ಆಗುತ್ತದೆಯೇ? ಜೆಡಿಎಸ್ ಸ್ವಂತ ಶಕ್ತಿ ಬಲದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಎದುರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಮತ್ತು ಬಿಜೆಪಿ ನಡುವೆ ಸಂಬಂಧ ಉತ್ತಮವಾಗಿದೆ. ಹಾಗೆಯೇ, ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರೊಂದಿಗೂ ನಮ್ಮ ಬಾಂಧವ್ಯ ಉತ್ತಮವಾಗಿದೆ. ನಮ್ಮ ಶಕ್ತಿ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲಾ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ನಗರ ಪಾಲಿಕೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆೆ. ಈ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷರು ನೀಡಿರುವ ಹೇಳಿಕೆ ತಪ್ಪು ಎಂದು ನಾನು ಹೇಳಲಾರೆ ಎಂದು ದೇವೇಗೌಡರು ಪ್ರತಿಕ್ರಿಯಿಸಿದರು.
ಪಕ್ಷದ ಸಂಘಟನೆಯ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡಿದ್ದೇನೆ. ಹಾಸನದಲ್ಲಿ ಜನವರಿ 23ರಂದು ಹಾಗೂ ಬೆಂಗಳೂರಿನಲ್ಲಿ ಜನವರಿ 18ರಂದು ಸಭೆಗಳನ್ನು ಮಾಡಲಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪ್ರತ್ಯೇಕವಾಗಿ ಹೋರಾಟ ಮಾಡುತ್ತದೆ. ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಎನ್‌ಡಿಎ ಮೈತ್ರಿಕೂಟದಲ್ಲಿಯೇ ಇರುತ್ತೇವೆ. ಹಾಗೆಯೇ, ವಿಧಾನಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್‌ಗೆ ಮತ್ತು 3 ಸ್ಥಾನ ಬಿಜೆಪಿಗೆ ಹಂಚಿಕೆಯಾಗುವ ಬಗ್ಗೆ ಪ್ರಾಥಮಿಕ ಮಟ್ಟದಲ್ಲಿ ಚರ್ಚೆ ಆಗಿದೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.
ಬೆಂಗಳೂರು ನಗರದಲ್ಲಿಯೂ ಪಕ್ಷ ಸಂಘಟನೆ ಮಾಡುವ ಬಗ್ಗೆ ಕೆಲಸ ಮಾಡುತ್ತಿದ್ದೇವೆ. ಸುಮ್ಮನೆ ಕೂರುವುದು ನನಗೆ ಇಷ್ಟವಿಲ್ಲ. ಹೀಗಾಗಿ, ಪಕ್ಷ ಕಟ್ಟುವ ಕೆಲಸದಲ್ಲಿ ನಾನು ತೊಡಗಿದ್ದೇನೆ. ಎಲ್ಲಿಗೆ ಕರೆದರೂ ಹೋಗುತ್ತೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸರ: ಕೇಂದ್ರ ಸಚಿವ ಕುಮಾರಸ್ವಾಮಿ ಅವರು ರಾಜ್ಯಕ್ಕೆ ಒಳ್ಳೆಯದು ಮಾಡಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ನೀಡುತ್ತಿಲ್ಲ. ಹೆಚ್ಎಂಟಿ ಕಾರ್ಖಾನೆ ಪುನಶ್ಚೇತನಕ್ಕೆ ಶ್ರಮಿಸುತ್ತಿದ್ದಾರೆ. ಅದಕ್ಕೆ ರಾಜ್ಯ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಹಿಂದೆ ನೀಡಲಾಗಿರುವ ಭೂಮಿಯನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಈ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದು ದೇವೇಗೌಡರು ಬೇಸರ ವ್ಯಕ್ತಪಡಿಸಿದರು.
ಭದ್ರಾವತಿಯಲ್ಲಿ ಮೈಸೂರು ಮಹಾರಾಜರು, ಸರ್ ಎಂ.ವಿಶ್ವೇಶ್ವರಯ್ಯ ಅವರು ಕಟ್ಟಿದ ಉಕ್ಕು ಕಾರ್ಖಾನೆಯನ್ನು ಉಳಿಸಿಕೊಳ್ಳಲು ಕುಮಾರಸ್ವಾಮಿ ಕಷ್ಟಪಡುತ್ತಿದ್ದಾರೆ. ಅದನ್ನು ಪುನಶ್ಚೇತನ ಮಾಡಬೇಕಾದರೆ ಕಬ್ಬಿಣದ ಅದಿರು ಬೇಕು. ಅದಕ್ಕೂ ರಾಜ್ಯ ಸರ್ಕಾರ ಸಹಕಾರ ಕೊಡುತ್ತಿಲ್ಲ. ಹೀಗಾದರೆ ಹೇಗೆ ರಾಜ್ಯ ಅಭಿವೃದ್ಧಿ ಆಗುತ್ತದೆ? ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದರು.
ಸಿದ್ಧರಾಮಯ್ಯಗೆ ಸವಾಲು ಹಾಕಿದ ಗೌಡರು: ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸಮಾವೇಶ ಮಾಡುತ್ತಿದ್ದಾರೆ ಎಂದು ಪತ್ರಿಕೆಯಲ್ಲಿ ಸುದ್ದಿ ಓದಿದೆ. ಅದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ನೀಡಿರುವ ಹೇಳಿಕೆಯನ್ನು ಕೂಡ ನಾನು ಓದಿದ್ದೇನೆ. ಜನವರಿ 25ರಂದು ಅಹಿಂದ ಸಮಾವೇಶ ಮಾಡುತ್ತಾರಂತೆ. ನಾವು 23ರಂದು ಹಾಸನದಲ್ಲಿ ಸಮಾವೇಶ ಮಾಡುತ್ತೇವೆ. ಈ ಅಹಿಂದ ವ್ಯಾಖ್ಯಾನ ಏನು? ಇಡೀ ದೇಶದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೆಣ್ಣುಮಕ್ಕಳಿಗೆ ಮೀಸಲು ಕೊಟ್ಟವರು ಯಾರು? ಮುಸ್ಲಿಮರಿಗೂ ಮೀಸಲು ಕೊಟ್ಟವರು ಯಾರು? ನಾಯಕ ಸಮಾಜಕ್ಕೆ ಮೀಸಲಾತಿ ಕೊಟ್ಟವರು ಯಾರು? ನಾನು ವಸತಿ ಶಾಲೆಗಳನ್ನು ಕೊಟ್ಟೆ. ನಾನು ದೆಹಲಿಗೆ ಹೋದ ಮೇಲೆ ಇದೇ ಸಿದ್ದರಾಮಯ್ಯ ಹಣಕಾಸು, ಅಬಕಾರಿ ಮಂತ್ರಿ ಹಾಗೂ ಉಪ ಮುಖ್ಯಮಂತ್ರಿ, ಆಮೇಲೆ ಜೆ.ಹೆಚ್.ಪಟೇಲ್ ಮುಖ್ಯಮಂತ್ರಿ. ನಂತರ ಎಸ್.ಎಂ.ಕೃಷ್ಣ ಬಂದರು. ವಸತಿ ಶಾಲೆಗಳ ಕಥೆ ಏನಾಯಿತು? ಸಿದ್ದರಾಮಯ್ಯ ಅವರನ್ನು ಗುರುತಿಸಿದ್ದು ನಾನು ಎಂದು ಹೇಳಲ್ಲ, ಅವರೇ ಹೇಳಿಕೊಳ್ಳಲಿ. ನನ್ನ ಬಗ್ಗೆ ಅವರು ಎಷ್ಟು ಬೇಕಾದರೂ ಕಠಿಣವಾಗಿ ಮಾತನಾಡಲಿ. ಈ ಅಹಿಂದವನ್ನು ಯಾವ ಲೇಬಲ್ ಇಟ್ಟುಕೊಂಡು ಮಾಡಿದಿರಿ? ಒಳಮೀಸಲಾತಿಯಲ್ಲಿ ಯಾವ ಯಾವ ಸಮುದಾಯಕ್ಕೆ ಎಷ್ಟೆಷ್ಟು ಹೋಗಿದೆ ಎಂದು ಹೇಳಿದರೆ, ನಿಮ್ಮ ಬಜೆಟ್ಗಳ ಬಗ್ಗೆ ಮಾತಾಡೋಣವಾ? ಚರ್ಚೆ ಮಾಡೋಣವಾ? ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿಗಳು ಸವಾಲು ಹಾಕಿದರು.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಟಿ.ಎನ್.ಜವರಾಯಿ ಗೌಡ, ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನಪರಿಷತ್ ಮಾಜಿ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ನಗರ ಘಟಕದ ಮಾಜಿ ಅಧ್ಯಕ್ಷ ಪ್ರಕಾಶ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್ ಸೇರಿದಂತೆ ಹಲವು ಮುಖಂಡರು ದೇವೇಗೌಡರು ಜೊತೆ ಉಪಸ್ಥಿತರಿದ್ದರು.
ಇದನ್ನೂ ಓದಿ: ನಾನು-ಶಾಮನೂರು 1995ರಿಂದ ಪರಿಚಯ, ಯಜಮಾನ್ರೇ ಎಂದು ಕರೆಯುತ್ತಿದ್ದೆ: ಸಿಎಂ ಸಿದ್ದರಾಮಯ್ಯ

