ETV Bharat / state

ಎ.23, 24ರಂದು ಸಿಇಟಿ ಪರೀಕ್ಷೆ: ಕ್ಯಾಮರಾ ಕಣ್ಗಾವಲು, ವಸ್ತ್ರ ಸಂಹಿತೆ ಕುರಿತು ಇಲ್ಲಿದೆ ಮಾಹಿತಿ

ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಸಿದ್ದು, ಅಕ್ರಮಗಳಿಗೆ ಅವಕಾಶ ಇಲ್ಲದಂತೆ ನಿಗಾ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

CET EXAM 2026
ಸಂಗ್ರಹ ಚಿತ್ರ (IANS)
author img

By ETV Bharat Karnataka Team

Published : April 22, 2026 at 10:07 AM IST

3 Min Read
Choose ETV Bharat

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಎಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಎಪ್ರಿಲ್ 22ರಂದು ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಲಿದೆ. ಎ.23ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ ಎ.24ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

CET EXAM 2026
ಸಿಇಟಿ ಪರೀಕ್ಷೆ ಕುರಿತು ಮಾಹಿತಿ (ETV Bharat)

ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ನೇಮಕಾತಿ ಪರೀಕ್ಷೆಗಳಿಗೆ ಮಾಡುವ ಹಾಗೆ ಈ ಪರೀಕ್ಷೆಗೂ ಕ್ಯಾಮರಾ ಕಣ್ಗಾವಲು ಇರುತ್ತದೆ. ವೆಬ್ ಕಾಸ್ಟಿಂಗ್ ಮೂಲಕ ಎಲ್ಲ 745 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ ಮಾಡಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ನಡೆಸಲಿದ್ದಾರೆ ಎಂದು ವಿವರಿಸಿದ್ದಾರೆ.

ಬೆಂಗಳೂರಿನ 163 ಕೇಂದ್ರಗಳಲ್ಲಿ ಅತಿ ಹೆಚ್ಚು ಅಂದರೆ ಒಟ್ಟು 77,604 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದರ ಕಮಾಂಡ್ ಸೆಂಟರ್ ಕೆಇಎ ಕಚೇರಿಯಲ್ಲಿ ಸ್ಥಾಪಿಸಲಾಗಿದೆ ಎಂದು ಅವರು ವಿವರಿಸಿದರು.

ಒಟ್ಟು 970 ವಿಶೇಷ ಚೇತನ ಮಕ್ಕಳು ಸಿಇಟಿ ಬರೆಯುತ್ತಿದ್ದು, ಅವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಶ್ರವಣ ಸಾಧನ ಬಳಸಿಕೊಂಡು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಬೇಕಾಗಿರುವ ಕಾರಣ ಅಂತಹವರು ಎರಡು ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಬರಬೇಕೆಂದು ಅವರು ಸಲಹೆ ನೀಡಿದ್ದಾರೆ.

ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಕೂಡ ಅಳವಡಿಸಿದ್ದು, ಅಕ್ರಮಗಳಿಗೆ ಅವಕಾಶ ಇಲ್ಲದಂತೆ ನಿಗಾ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.

ಎರಡು ಗಂಟೆ ಮುಂಚೆ ಬನ್ನಿ: ಅಭ್ಯರ್ಥಿಗಳನ್ನು ತೀವ್ರ ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರದೊಳಗೆ ಬಿಡುವ ಕಾರಣಕ್ಕೆ ಕನಿಷ್ಠ ಎರಡು ಗಂಟೆ ಮುಂಚಿತವಾಗಿ ಅವರು ಪರೀಕ್ಷಾ ಕೇಂದ್ರಕ್ಕೆ ಹೋಗಬೇಕು. ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ. ಯಾರದ್ದೋ ಪರೀಕ್ಷೆಯನ್ನು ಇನ್ಯಾರೊ ಬರೆಯುವುದನ್ನು ತಡೆಯುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿ ಮಾಡಿದ್ದು, ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಆಗುವ ಸಂದರ್ಭದಲ್ಲಿ ಕೂಡ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಿಯೇ ಪ್ರವೇಶ ನೀಡುವ ವ್ಯವಸ್ಥೆ ಮಾಡಿದ್ದು, ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.

CET EXAM 2026
ವಸ್ತ್ರ ಸಂಹಿತೆ ಕುರಿತು ಮಾಹಿತಿ (ETV Bharat)

ಕಷ್ಟಪಟ್ಟು ಓದಿದ ಅಭ್ಯರ್ಥಿಗಳಿಗೆ ಯಾವುದೇ ಮೋಸ ಆಗಲು ಬಿಡುವುದಿಲ್ಲ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದು, ನಿಶ್ಚಿಂತೆಯಿಂದ ಪರೀಕ್ಷೆ ಬರೆಯಬಹುದು ಎಂದು ಅವರು ಅಭಯ ನೀಡಿದ್ದಾರೆ.

ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಅಥವಾ ಅನುತ್ತೀರ್ಣ ಆಗಿರುವವರಿಗೆ ಇನ್ನೂ ಫಲಿತಾಂಶವನ್ನು ಉತ್ತಮ ಮಾಡಿಕೊಳ್ಳಲು ಅವಕಾಶ ಇರುವ ಕಾರಣ ಯಾರೂ ಸಿಇಟಿ ಬರೆಯುವುದನ್ನು ತಪ್ಪಿಸಿಕೊಳ್ಳಬಾರದು. ಹೀಗಾಗಿ ಯಾರೆಲ್ಲ ಶುಲ್ಕ ಪಾವತಿಸಿದ್ದೀರೊ ಅವರೆಲ್ಲರೂ ಪ್ರವೇಶ ಪತ್ರ ಡೌನ್​ಲೋಡ್ ಮಾಡಿಕೊಂಡು ಪರೀಕ್ಷೆ ಬರೆಯಬೇಕು. ಎರಡನೇ ಪರೀಕ್ಷೆಯ ಅಂಕಗಳನ್ನು ಕೂಡ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು ಎಂದು ಪ್ರಸನ್ನ ಅವರು ಸಲಹೆ ನೀಡಿದ್ದಾರೆ.

ವಸ್ತ್ರ ಸಂಹಿತೆ:

  • ಅನಗತ್ಯ ಗೊಂದಲ ತಪ್ಪಿಸಲು ಇದೇ ಮೊದಲ ಬಾರಿಗೆ ಪ್ರತಿ ಕೇಂದ್ರಕ್ಕೆ ಒಬ್ಬ ವಸ್ತ್ರ ಸಂಹಿತೆ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಪ್ರಸನ್ನ ತಿಳಿಸಿದರು.
  • ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು.
  • ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ.
  • ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು.
  • ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್​ಗೆ ಅವಕಾಶ ಇರುವುದಿಲ್ಲ. ಶೂ ಕೂಡ ನಿಷೇಧಿಸಲಾಗಿದೆ.
  • ಮೊಬೈಲ್, ಬ್ಲೂಟೂತ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.
  • ಒಮ್ಮೆ ಕೆಇಎ ವೆಬ್​ಸೈಟ್​ನಲ್ಲಿ ಇರುವ ವಸ್ತ್ರ ಸಂಹಿತೆಯ ವಿವರಗಳನ್ನು ಓದಿಕೊಂಡು, ಆ ಪ್ರಕಾರ ಪರೀಕ್ಷೆಗೆ ಬರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ತಪ್ಪಿಲ್ಲದೆ ಒಎಂಆರ್ ಭರ್ತಿ ಮಾಡಿ: ಒಎಂಆರ್ ಶೀಟ್​ನಲ್ಲಿ ಅಭ್ಯರ್ಥಿಗಳು ತಮ್ಮ ಸ್ವವಿವರಗಳನ್ನು ಯಾವುದೇ ತಪ್ಪಿಲ್ಲದೆ ದಾಖಲಿಸಬೇಕು ಎಂದು ಪ್ರಸನ್ನ ಅವರು ಸಲಹೆ ನೀಡಿದ್ದಾರೆ.

ಅಭ್ಯರ್ಥಿಯ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಮತ್ತು ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆಯನ್ನು ಸರಿಯಾಗಿ ನಮೂದಿಸಿ, ಸಂಬಂಧಿಸಿದ ವೃತ್ತಗಳನ್ನು ಶೇಡ್ ಮಾಡಬೇಕು. ಈ ಹಿಂದೆ ಈ ಮಾಹಿತಿ ಕೂಡ ಸರಿಯಾಗಿ ಭರ್ತಿ ಮಾಡದಿರುವ ಕಾರಣ ಫಲಿತಾಂಶ ಪ್ರಕಟಣೆಗೂ ಸಮಸ್ಯೆ ಆಗಿತ್ತು. ಹೀಗಾಗಿ ಅಭ್ಯರ್ಥಿಗಳು ಎಚ್ಚರವಹಿಸಬೇಕು. ಅಭ್ಯಾಸ ಮಾಡಲಿ ಎನ್ನುವ ಕಾರಣಕ್ಕೆ ಕರಡು ಒಎಂಆರ್ ಸೀಟ್ ಕೂಡ ಪ್ರವೇಶ ಪತ್ರದ ಜತೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿದ್ದು, ಅದನ್ನು ಅಭ್ಯಾಸ ಮಾಡುವುದರ ಮೂಲಕ ಅನಗತ್ಯ ತಪ್ಪುಗಳನ್ನು ತಡೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ತೃತೀಯ ಭಾಷೆಗಳಿಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಲು ಹೈಕೋರ್ಟ್ ಆದೇಶ; ರಾಜ್ಯ ಸರ್ಕಾರಕ್ಕೆ ಹಿನ್ನಡೆ