ಮಂಗಳೂರು: ವಶಪಡಿಸಿಕೊಂಡಿದ್ದ ಹಣ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ವಶಪಡಿಸಿಕೊಂಡಿದ್ದ ಹಣ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಬಜ್ಪೆ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಎಂಬುವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Published : September 21, 2026 at 8:38 PM IST
ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ದೂರುದಾರರಿಂದ ಲಂಚ ಸ್ವೀಕರಿಸುತ್ತಿದ್ದ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ (ಇನ್ಸ್ಪೆಕ್ಟರ್ ) ಬಾಲಕೃಷ್ಣ ಅವರನ್ನು ಸೋಮವಾರ (ಸೆ. 21) ಬಂಧಿಸಲಾಗಿದೆ ಎಂದು ಮಂಗಳೂರು ಲೋಕಾಯುಕ್ತ ಪೊಲೀಸರ ಪ್ರಕಟಣೆ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ದೂರುದಾರರ ಬಳಿ ಒಟ್ಟು 25,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ ಈಗಾಗಲೇ 15,000 ರೂಪಾಯಿ ಹಣವನ್ನು ಮುಂಗಡವಾಗಿ ಪಡೆದುಕೊಂಡಿದ್ದರು. ಬಳಿಕ ಹೆಚ್ಚುವರಿಯಾಗಿ ಮತ್ತೆ 5,000 ರೂಪಾಯಿ ಲಂಚದ ಹಣ ನೀಡುವಂತೆ ಪೀಡಿಸುತ್ತಿದ್ದರು. ಈ ಕುರಿತು ಸಂತ್ರಸ್ತರು ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
5,000 ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸೆರೆ: ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿದರು. ದೂರುದಾರರಿಂದ ನಿಗದಿತ 5,000 ರೂಪಾಯಿ ಲಂಚದ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ಬಜ್ಪೆ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿ, ಮುಂದಿನ ಕಾನೂನು ಕ್ರಮ ಹಾಗೂ ತನಿಖೆ ಮುಂದುವರಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರು: 8 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಜಿಎಸ್ಟಿ ಅಧೀಕ್ಷಕ

