ಅಂಕೋಲಾ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿ - ಓರ್ವ ಸಾವು, 20 ಮಂದಿಗೆ ಗಂಭೀರ ಗಾಯ
ಅಂಕೋಲಾದ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, 20 ಮಂದಿಗೆ ಗಂಭೀರ ಗಾಯವಾಗಿದೆ.

Published : May 30, 2026 at 1:29 PM IST
ಕಾರವಾರ (ಉತ್ತರ ಕನ್ನಡ) : ಜಿಲ್ಲೆಯ ಅಂಕೋಲಾದ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯ ವಿವರ: ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ 'ಸೀಬರ್ಡ್' ಸಂಸ್ಥೆಗೆ ಸೇರಿದ ಖಾಸಗಿ ಬಸ್, ಅಂಕೋಲಾ - ಯಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿತ್ತು. ಈ ವೇಳೆ ಕಂಚಿನಬಾಗಿಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆಯಲ್ಲೇ ಪಲ್ಟಿಯಾಗಿ ಹೆದ್ದಾರಿಗೆ ಅಡ್ಡವಾಗಿ ಬಿದ್ದಿದೆ.
ಪ್ರಾಣಾಪಾಯ ಮತ್ತು ಗಾಯಾಳುಗಳು : ಘಟನೆ ನಡೆದ ಸಂದರ್ಭದಲ್ಲಿ ಬಸ್ಸಿನಲ್ಲಿ ಒಟ್ಟು 36 ಪ್ರಯಾಣಿಕರಿದ್ದರು. ಈ ಪೈಕಿ ಆಂಧ್ರಪ್ರದೇಶ ಮೂಲದ ಶರಣಯ್ಯ (42) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಉಳಿದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಅಂಕೋಲಾ ತಾಲೂಕು ಆಸ್ಪತ್ರೆ ಮತ್ತು ಕಾರವಾರದ ಜಿಲ್ಲಾ ಆಸ್ಪತ್ರೆಗೆ (ಕ್ರಿಮ್ಸ್) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ : ಬಸ್ ಹೆದ್ದಾರಿಗೆ ಅಡ್ಡವಾಗಿ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇದರಿಂದಾಗಿ ರಸ್ತೆಯ ಎರಡೂ ಬದಿಗಳಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡುವಂತಾಯಿತು.
ಸ್ಥಳೀಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ಸನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸುವ ಕಾರ್ಯ ನಡೆಯುತ್ತಿದೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಐವರು ಸ್ಥಳದಲ್ಲೇ ಸಾವು (ಚಿತ್ರದುರ್ಗ) : ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬಳಿಯ ಶ್ರೀನಿವಾಸ್ ದಾಬ ಹತ್ತಿರ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿತ್ತು. ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ರಘು (40), ರುದ್ರೇಶ್ (36), ಸೋಮಶೇಖರ್ (35), ಮಲ್ಲಿಕಾರ್ಜುನ, ಪ್ರಮೋದ್ (35) ಮೃತಪಟ್ಟಿದ್ದರು.
ಪಿಎಸ್ಐ ಮಹೇಶ್ ಹೊಸಪೇಟ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಐವರು ಸ್ಥಳದಲ್ಲೇ ಸಾವು

