ETV Bharat / state

ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬ: ಸಿಎಂ ಸಿದ್ದರಾಮಯ್ಯ

ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದ್ದು, ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

CM REACT ON RECRUITMENT
ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : February 26, 2026 at 2:42 PM IST

2 Min Read
Choose ETV Bharat

ಉಡುಪಿ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಬುಧವಾರ ಕಾರ್ಕಳದಲ್ಲಿ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿನ್ನೆ ಆಯೋಜಿಸಿದ್ದ ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಕಿಸಾನ್ ಸಭಾ ಸಭಾಂಗಣದ ಉದ್ಘಾಟನೆ ಬಳಿಕ ಮಾತನಾಡಿದರು. ಉದ್ಯೋಗ ಒದಗಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು. ಕೆಲ ಇಲಾಖೆಗಳ ನೇಮಕಾತಿ ಬಗ್ಗೆ ಬಜೆಟ್​ನಲ್ಲೂ ಘೋಷಿಸಲಾಗುವುದು ಎಂದರು.

ಕಾರ್ಕಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

ಅನೆದಾಳಿ - ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ರಮ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಇತ್ತೀಚೆಗೆ ಆನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಆನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ಹಾಗೂ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ ಎಂಬ ಮಾಹಿತಿ ಇದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಮಾದಕವಸ್ತುಗಳ ನಿಗ್ರಹ: ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿದ್ಯಾರ್ಥಿ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.

ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ಯೂನಿವರ್ಸಿಟಿಗೆ ಎಬಿವಿಪಿ ವಿದ್ಯಾರ್ಥಿಗಳು ನುಗ್ಗಿ ದಾಂಧಲೆ ನಡೆಸಿರುವ ಬಗ್ಗೆ ಉತ್ತರಿಸಿ, ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52,000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.

ಪರಿಸರವಾದಿಗಳೊಂದಿಗೆ ಚರ್ಚೆ: ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದೇ ಎಂಬುದಕ್ಕೆ ಉತ್ತರಿಸುತ್ತಾ, ಇದಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಥೀಮ್ ಪಾರ್ಕ್ ಪೂರ್ಣ: ಕಾರ್ಕಳದಲ್ಲಿ ಪರುಶರಾಮ ಥೀಮ್​ ಪಾರ್ಕ್ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಥೀಮ್ ಪಾರ್ಕ್ ನಿರ್ಮಾಣ ಯೋಜನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಮಹಾಮಸ್ತಕಾಭಿಷೇಕಕ್ಕೆ ಅರ್ಥಿಕ ಸಹಾಯ: ಕಾರ್ಕಳದಲ್ಲಿ 2027ರಲ್ಲಿ ನಡೆಯುವ ಐತಿಹಾಸಿಕ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಅರ್ಥಿಕ ಸಹಾಯವನ್ನು ಇಲ್ಲಿನ ಜನಪ್ರತಿನಿಧಿಗಳು ಕೋರಿದ್ದು, ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದು ಸಿಎಂ ತಮ್ಮ ಅಧಿಕೃತ ಜಾಲತಾಣ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಕೊಟ್ಟ ಮಾತಿನಂತೆ ನೇಮಕಾತಿ ಮಾಡುತ್ತೇವೆ, ಬಜೆಟ್​ನಲ್ಲೂ ಘೋಷಿಸುವೆ: ಮುಖ್ಯಮಂತ್ರಿ ಸಿದ್ದರಾಮಯ್ಯ