ETV Bharat / state

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು ಸೋಮವಾರಕ್ಕೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್​ ಮಾಫಿ ಸಾಕ್ಷಿ ಹೇಳಿಕೆ ದಾಖಲು ಪ್ರಕ್ರಿಯೆಯನ್ನು ನ್ಯಾಯಾಲಯವು ಮುಂದೂಡಿಕೆ ಮಾಡಿದೆ.

renukaswamy-murder-case-approver-pradosh-statement-recording-postponed-to-monday
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : September 2, 2026 at 2:38 PM IST

1 Min Read
Choose ETV Bharat

ಬೆಂಗಳೂರು: ​ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ-14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು ಪ್ರಕ್ರಿಯೆಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಸೋಮವಾರಕ್ಕೆ ಮುಂದೂಡಿದೆ.​

ಈ ಪ್ರಕರಣದಲ್ಲಿ ಪ್ರದೋಷ್​ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ, ಹೇಳಿಕೆ ದಾಖಲು ಪ್ರಕ್ರಿಯೆಯನ್ನು ಮುಂದೂಡಲಾಗಿದೆ.

ಹೈಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆಗೆ ಬರಲಿದ್ದು, ಅಲ್ಲಿ ಹೊರಬೀಳುವ ಆದೇಶದ ಮೇಲೆಯೇ ಪ್ರದೋಷ್ ಹೇಳಿಕೆ ದಾಖಲಾತಿಯ ಭವಿಷ್ಯ ನಿರ್ಧಾರವಾಗಲಿದೆ.​ ವಿಚಾರಣೆ ವೇಳೆ, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ, ಇಂದು ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಮುಂದೂಡುವಂತೆ ಸರ್ಕಾರಿ ಅಭಿಯೋಜಕರಾದ ಪ್ರಸನ್ನ ಕುಮಾರ್ ಅವರು ಸಿಟಿ ಸಿವಿಲ್ ಕೋರ್ಟ್‌ಗೆ ಮನವಿ ಮಾಡಿದರು. ವಕೀಲರ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಪ್ರದೋಷ್ ಅವರ ಹೇಳಿಕೆ ದಾಖಲು ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಿ ಆದೇಶಿಸಿದರು.

ಇಂದು ಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಗಿ ಭದ್ರತೆಯಲ್ಲಿ ಪ್ರದೋಷ್​ನನ್ನು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತಾದರೂ, ವಿಚಾರಣೆ ಮುಂದೂಡಿಕೆಯಾದ ಕಾರಣ ಜೈಲಾಧಿಕಾರಿಗಳು ಹಾಗೂ ಪೊಲೀಸರು ಮರಳಿ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದರು.

ಪ್ರದೋಷ್ ಮಾಫಿ ಸಾಕ್ಷಿಯಾಗುವುದು ಈ ಪ್ರಕರಣದ ಅತ್ಯಂತ ನಿರ್ಣಾಯಕ ತಿರುವು ಎಂದು ಭಾವಿಸಲಾಗಿದೆ. ಹೀಗಾಗಿ ಹೈಕೋರ್ಟ್ ನೀಡಲಿರುವ ಆದೇಶದತ್ತ ನಟ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳ ಚಿತ್ತ ನೆಟ್ಟಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2024ರ ಜೂನ್ ತಿಂಗಳಿನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರದೋಷ್ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ನೀಡಲಾದ ಜಾಮೀನನ್ನು ಸುಪ್ರೀಂ ಕೋರ್ಟ್​ ರದ್ದುಪಡಿಸಿದ ಬಳಿಕ 2025ರಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸೋಮವಾರ ​​ಪ್ರದೋಷ್​ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಬೇಕಿದೆ.

ಇದನ್ನೂ ಓದಿ: ಉಗ್ರಾಣದಲ್ಲಿದ್ದ ಧಾನ್ಯದ ತೂಕ ಕಡಿಮೆಯಾದರೆ ಸಿಬ್ಬಂದಿ ಮೇಲೆ ಶಿಸ್ತು ಕ್ರಮಕ್ಕೆ ಅವಕಾಶವಿಲ್ಲ: ಹೈಕೋರ್ಟ್