ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ 7 ಮಂದಿ ಸ್ವಿಗ್ಗಿ ಡೆಲಿವರಿ ಬಾಯ್ಸ್ ಸಾವು
ಅರಬೈಲ್ ಘಾಟ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಧಾರವಾಡ ಮೂಲದ 7 ಜನ ಸಾವನ್ನಪ್ಪಿದ್ದಾರೆ.

Published : July 9, 2026 at 8:37 AM IST
ಕಾರವಾರ(ಉತ್ತರ ಕನ್ನಡ): ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ 'ಸ್ವಿಗ್ಗಿ' (Swiggy) ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರವಾಸಕ್ಕೆ ಹೊರಟಿದ್ದಾಗ ಸಂಭವಿಸಿದ ದುರಂತ: ಧಾರವಾಡದಿಂದ ರಾತ್ರಿ ವೇಳೆ ಧರ್ಮಸ್ಥಳ ಹಾಗೂ ಮಂಗಳೂರು ಕಡೆಗೆ ಪ್ರವಾಸ ಹೊರಟಿದ್ದಾಗ ಈ ಘೋರ ದುರಂತ ಸಂಭವಿಸಿದೆ. ತೂಫಾನ್ ವಾಹನದಲ್ಲಿ (KA19AA5920) ಚಾಲಕ ಸೇರಿದಂತೆ ಒಟ್ಟು 9 ಜನರಿದ್ದರು. ಅರಬೈಲ್ ಘಾಟ್‌ನ ಬಳಗಾರ್ ತಲುಪುತ್ತಿದ್ದಂತೆ ತೂಫಾನ್ ವಾಹನ ಹಾಗೂ ಲಾರಿ (KA22AA1008) ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೂಫಾನ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರ ವಿವರ: ಅಪಘಾತದಲ್ಲಿ ತೂಫಾನ್ ವಾಹನದಲ್ಲಿದ್ದ 7 ಜನರು ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬಸವರಾಜ್ (48 ವರ್ಷ), ಅಭಿಷೇಕ್ ಈಶ್ವರ್ (28 ವರ್ಷ), ಅಕ್ಷಯ (26 ವರ್ಷ), ಅಭಿಷೇಕ್ (26 ವರ್ಷ), ಸಂಜೀವ/ಸಂಜಯ ಅಂಗಡಿ (33 ವರ್ಷ - ವಾಹನ ಚಾಲಕ), ಮಂಜುನಾಥ ಚುಲಕಿ (32 ವರ್ಷ) ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಶಿವರಾಜ್ ದುರ್ಗಪ್ಪ ಮಡಿವಾಳ್ (22 ವರ್ಷ) ಸೇರಿ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತ ಸ್ಥಳಕ್ಕೆ ಪೊಲೀಸರ ಭೇಟಿ: ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಾಳು ಶಿವರಾಜ್ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 281 (ಸಾರ್ವಜನಿಕ ರಸ್ತೆಯಲ್ಲಿ ನಿರ್ಲಕ್ಷ್ಯ ಅಥವಾ ದುಡುಕಿನ ಚಾಲನೆ), 125(2) (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯ - ಗಂಭೀರ ಗಾಯ) ಮತ್ತು 106(1) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

